ಹಾಸನ : ಲಾರಿಗೆ ಖಾಸಗಿ ಬಸ್ ಡಿಕ್ಕಿ - 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ
- sathyapathanewsplu
- Dec 28, 2025
- 1 min read

ಚನ್ನರಾಯಪಟ್ಟಣ: ತಾಲೂಕಿನ ಬೈಪಾಸ್ ರಸ್ತೆಯಲ್ಲಿ ಶನಿವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಹಾಸನದ ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್, ಮುಂಭಾಗದಲ್ಲಿ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಬಸ್ ಚಾಲಕನ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವರದಿಯಾಗಿದೆ.
ಅಪಘಾತದ ಸಮಯದಲ್ಲಿ ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಹಲವು ಪ್ರಯಾಣಿಕರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಗಾಯಾಳುಗಳ ಪೈಕಿ 13 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಚಾಲಕನ ಅಜಾಗರೂಕತೆ ಕಾರಣವೇ ಅಥವಾ ತಾಂತ್ರಿಕ ದೋಷವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯ ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.






Comments