ಕರಾವಳಿ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ
- sathyapathanewsplu
- Dec 30, 2025
- 1 min read

ಕಾರವಾರ: ಮಂಗಳೂರು, ಉಡುಪಿ ಮತ್ತು ಕಾರವಾರ ಸೇರಿದಂತೆ ರಾಜ್ಯದ ಸುಮಾರು 300 ಕಿ.ಮೀ ಉದ್ದದ ಕರಾವಳಿ ತೀರದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ನೂತನ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾರವಾರದಲ್ಲಿ ಆಯೋಜಿಸಲಾಗಿದ್ದ 'ಕರಾವಳಿ ಉತ್ಸವ'ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಭಾಗದ ನೈಸರ್ಗಿಕ ಸೌಂದರ್ಯವನ್ನು ಬಳಸಿಕೊಂಡು ಪ್ರವಾಸೋದ್ಯಮಕ್ಕೆ ಹೊಸ ಕಳೆ ನೀಡುವ ಸರ್ಕಾರದ ಯೋಜನೆಯನ್ನು ಅನಾವರಣಗೊಳಿಸಿದರು.
ಕರಾವಳಿ ಭಾಗದ ಯುವಜನತೆ ಉದ್ಯೋಗ ಅರಸಿ ಬೆಂಗಳೂರು ಅಥವಾ ಸೌದಿ ಅರೇಬಿಯಾದಂತಹ ವಿದೇಶಗಳಿಗೆ ವಲಸೆ ಹೋಗುತ್ತಿರುವುದನ್ನು ತಪ್ಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಸ್ಥಳೀಯವಾಗಿಯೇ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಖಾಸಗಿ ಸಹಭಾಗಿತ್ವದಲ್ಲಿ (PPP Model) ಬೃಹತ್ ಹೂಡಿಕೆಗಳಿಗೆ ಉತ್ತೇಜನ ನೀಡಲಾಗುವುದು. ಈ ಮೂಲಕ ಕರಾವಳಿಯ ಆರ್ಥಿಕತೆಯನ್ನು ಬಲಪಡಿಸಲು ಸರ್ಕಾರ ಮುಂದಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಆಶಯ ವ್ಯಕ್ತಪಡಿಸಿದರು.
ಈ ಮಹತ್ವಾಕಾಂಕ್ಷಿ ಯೋಜನೆಯ ಕುರಿತು ಚರ್ಚಿಸಲು ಜನವರಿ 10ರಂದು ಮಂಗಳೂರಿನಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದ ಜನಪ್ರತಿನಿಧಿಗಳು ಮತ್ತು ಪ್ರಮುಖ ಅಧಿಕಾರಿಗಳ ಮಹತ್ವದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ದೇಶ-ವಿದೇಶಗಳ ಹೂಡಿಕೆದಾರರು ಭಾಗವಹಿಸಲಿದ್ದು, ಭೂಮಿ ಹಂಚಿಕೆ ಮತ್ತು ಪರಿಹಾರದ ವಿಚಾರವಾಗಿ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.






Comments