ನಾಯಕತ್ವ ಗೊಂದಲಕ್ಕೆ ತೆರೆ: ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ, ಒಗ್ಗಟ್ಟಿನ ಸಂದೇಶ ರವಾನೆ
- sathyapathanewsplu
- Nov 29
- 1 min read

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸ 'ಕಾವೇರಿ'ಗೆ ಭೇಟಿ ನೀಡಿದ್ದು ಎಲ್ಲರ ಗಮನ ಸೆಳೆಯಿತು. ಡಿಕೆ ಶಿವಕುಮಾರ್ ಅವರು ಆಗಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಉಭಯ ನಾಯಕರು ಉಪಾಹಾರ ಸೇವಿಸಿದರು. ಕಾಂಗ್ರೆಸ್ ಹೈಕಮಾಂಡ್‌ನ ನಿರ್ಧಾರದಂತೆ ನಡೆದ ಈ 'ಬ್ರೇಕ್‌ಫಾಸ್ಟ್ ಮೀಟಿಂಗ್' ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿತ್ತು.
2028ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಗೆಲುವಿನ ಬಗ್ಗೆ ಚರ್ಚೆ
ಉಪಾಹಾರ ಸಭೆ ಮುಕ್ತಾಯಗೊಂಡ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸುವ ಮೂಲಕ ಒಗ್ಗಟ್ಟಿನ ಸಂದೇಶ ರವಾನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಹೈಕಮಾಂಡ್ ಸೂಚನೆಯಂತೆ ನಾವಿಬ್ಬರೂ ಈ ಸಭೆಯಲ್ಲಿ ಭಾಗವಹಿಸಿದ್ದೆವು. ಮುಂಬರುವ 2028ರ ಸಾರ್ವತ್ರಿಕ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸಿ, ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಮ್ಮ ಚರ್ಚೆಗಳು ನಡೆದವು. ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಮುಖ್ಯ ಉದ್ದೇಶವಾಗಿದೆ" ಎಂದು ಘೋಷಿಸಿದರು.
ನನ್ನ ಮತ್ತು ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಿಎಂ ಸ್ಪಷ್ಟನೆ
ನಾಯಕತ್ವ ಬದಲಾವಣೆಯ ಕುರಿತ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ, "ನನ್ನ ಮತ್ತು ಡಿ.ಕೆ. ಶಿವಕುಮಾರ್ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ನಾವು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುತ್ತಿದ್ದೇವೆ. ಕೆಲವು ದಿನಗಳಿಂದ ನಡೆಯುತ್ತಿದ್ದ ಅನಗತ್ಯ ಚರ್ಚೆಗಳಿಗೆ ಇಂದು ನಾವು ಬ್ರೇಕ್ ಹಾಕಿದ್ದೇವೆ ಎಂದು ಭಾವಿಸುತ್ತೇನೆ" ಎಂದು ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು. ಈ ಜಂಟಿ ಸುದ್ದಿಗೋಷ್ಠಿ ರಾಜ್ಯ ಕಾಂಗ್ರೆಸ್‌ನಲ್ಲಿ ಉನ್ನತ ನಾಯಕತ್ವವು ಒಗ್ಗೂಡಿರುವುದನ್ನು ತೋರಿಸಿಕೊಟ್ಟಿತು.






Comments