ರಾಜ್ಯಾದ್ಯಂತ ಇಂದಿನಿಂದ ಪಲ್ಸ್ ಪೋಲಿಯೋ ಅಭಿಯಾನ ಆರಂಭ: 62 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ ಗುರಿ
- sathyapathanewsplu
- Dec 21, 2025
- 1 min read

ಬೆಂಗಳೂರು: ರಾಜ್ಯಾದ್ಯಂತ ಇಂದು (ಡಿಸೆಂಬರ್ 21) ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದ್ದು, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ರಾಜ್ಯ ಸರ್ಕಾರ ಬೃಹತ್ ಸಿದ್ಧತೆ ಮಾಡಿಕೊಂಡಿದೆ. ಮೊದಲ ದಿನ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 33,258 ಬೂತ್‌ಗಳಲ್ಲಿ ಲಸಿಕೆ ನೀಡಲಾಗುವುದು. ಇಂದಿನ ಅಭಿಯಾನದ ನಂತರ ಮುಂದಿನ ಮೂರು ದಿನಗಳ ಕಾಲ ಲಸಿಕಾ ಕಾರ್ಯಕರ್ತರು ಮನೆ-ಮನೆಗೆ ಭೇಟಿ ನೀಡಿ, ಬೂತ್‌ಗಳಿಗೆ ಬರಲು ಸಾಧ್ಯವಾಗದ ಮಕ್ಕಳಿಗೆ ಲಸಿಕೆ ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ.
ಈ ಬಾರಿಯ ಅಭಿಯಾನದಲ್ಲಿ ವಿಶೇಷವಾಗಿ ಗ್ರಾಮೀಣ ಭಾಗ, ನಗರ ಪ್ರದೇಶದ ಸ್ಲಂಗಳು ಹಾಗೂ ವಲಸೆ ಕಾರ್ಮಿಕರ ಮಕ್ಕಳ ಮೇಲೆ ಹೆಚ್ಚಿನ ಗಮನ ಹರಿಸಲಾಗಿದೆ. ಗುಡ್ಡಗಾಡು ಪ್ರದೇಶ, ಇಟ್ಟಿಗೆ ಗೂಡುಗಳು ಮತ್ತು ತೋಟದ ಮನೆಗಳಲ್ಲಿ ವಾಸಿಸುವ ಮಕ್ಕಳನ್ನು ಪತ್ತೆಹಚ್ಚಿ ಲಸಿಕೆ ನೀಡಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ನಿಲ್ದಾಣ, ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿಯೂ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಿರುವುದು ಈ ಅಭಿಯಾನದ ವಿಶೇಷತೆಯಾಗಿದೆ.
ಒಟ್ಟು 62,40,114 ಮಕ್ಕಳಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಿರುವ ಸರ್ಕಾರ, ಈ ಕಾರ್ಯಕ್ಕಾಗಿ 1.13 ಲಕ್ಷಕ್ಕೂ ಅಧಿಕ ಲಸಿಕಾ ಕಾರ್ಯಕರ್ತರನ್ನು ನಿಯೋಜಿಸಿದೆ. ಅಲ್ಲದೆ, ಲಸಿಕೆ ವಿತರಣೆಯ ಮೇಲ್ವಿಚಾರಣೆಗಾಗಿ 7,322 ಮೇಲ್ವಿಚಾರಕರು, 1,030 ಸಂಚಾರಿ ತಂಡಗಳು ಹಾಗೂ 2,096 ಟ್ರಾನ್ಸಿಟ್ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಲಾಗಿದೆ.





Comments