ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ
- sathyapathanewsplu
- Dec 22, 2025
- 1 min read

ಕರ್ನಾಟಕದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಸೀಸನಲ್ ಫ್ಲೂ (Seasonal Flu) ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಡಿಸೆಂಬರ್‌ನಿಂದ ಮಾರ್ಚ್ ಅವಧಿಯಲ್ಲಿ ಈ ಸೋಂಕು ಉಲ್ಬಣಿಸುವ ಸಾಧ್ಯತೆ ಇರುವುದರಿಂದ ರಾಜ್ಯ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಅಲರ್ಟ್ ಆಗಿರುವಂತೆ ಸೂಚಿಸಲಾಗಿದ್ದು, ಪ್ರಯೋಗಾಲಯಗಳಲ್ಲಿ ಅಗತ್ಯ ಟೆಸ್ಟಿಂಗ್ ಕಿಟ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಹಾಗೂ ನಿರಂತರ ಮಾನಿಟರಿಂಗ್ ನಡೆಸಲು ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.
ಈ ಸೋಂಕು ಪ್ರಮುಖವಾಗಿ ಸೋಂಕಿತ ವ್ಯಕ್ತಿಯ ಎಂಜಿಲು ಮತ್ತು ಕೆಮ್ಮಿನ ಹನಿಗಳ ಮೂಲಕ ಹರಡುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ವಿಶೇಷವಾಗಿ ರೋಗನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ದೀರ್ಘಕಾಲದ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಈ ಸೋಂಕು ತೀವ್ರವಾಗಿ ಕಾಡುವ ಸಾಧ್ಯತೆಯಿದೆ. ನಿರ್ಲಕ್ಷ್ಯ ವಹಿಸಿದರೆ ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿ ಬರಬಹುದು ಎಂದು ಇಲಾಖೆಯು ಎಚ್ಚರಿಸಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.
ಜ್ವರ, ಮೈ-ಕೈ ನೋವು, ವಿಪರೀತ ಶೀತ, ಒಣ ಕೆಮ್ಮು, ಹಸಿವು ಇಲ್ಲದಿರುವುದು ಮತ್ತು ಚರ್ಮದ ಮೇಲೆ ಕೆಂಪು ಗುಳ್ಳೆಗಳು ಕಾಣಿಸಿಕೊಳ್ಳುವುದು ಈ ಫ್ಲೂನ ಪ್ರಮುಖ ಲಕ್ಷಣಗಳಾಗಿವೆ. ಈ ಲಕ್ಷಣಗಳು ಸಾಮಾನ್ಯವಾಗಿ ಒಂದು ವಾರದಿಂದ ಮೂರು ವಾರಗಳವರೆಗೆ ಇರಬಹುದು. ಸಾರ್ವಜನಿಕರು ಜ್ವರ ಅಥವಾ ಕೆಮ್ಮು ಕಾಣಿಸಿಕೊಂಡ ತಕ್ಷಣ ಸ್ವಯಂ ಔಷಧಿ ಮಾಡದೆ ಹತ್ತಿರದ ವೈದ್ಯರನ್ನು ಸಂಪರ್ಕಿಸಬೇಕು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ನೈರ್ಮಲ್ಯ ಕಾಪಾಡಿಕೊಳ್ಳುವುದು ಉತ್ತಮ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.





Comments