ನೆಲ್ಯಾಡಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ತೀವ್ರ ಗಾಯ

ಕಡಬ: ತಾಲೂಕಿನ ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ಶನಿವಾರ (ಡಿ. 20) ಬೆಳಗ್ಗೆ ಕಾಡುಹಂದಿಯೊಂದು ಮಹಿಳೆಯ ಮೇಲೆ ಭೀಕರ ದಾಳಿ ನಡೆಸಿದೆ. ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ ನಿವಾಸಿ ಉಮೇಶ್ ಗೌಡರ ಪತ್ನಿ ಲೀಲಾವತಿ (36) ಅವರು ಈ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಣ್ಯ ಪ್ರದೇಶದಿಂದ ಏಕಾಏಕಿ ನುಗ್ಗಿ ಬಂದ ಕಾಡುಹಂದಿಯು ಮಹಿಳೆಯ ಮೇಲೆ ಎರಗಿದ್ದು, ದಾಳಿಯ ರಭಸಕ್ಕೆ ಅವರ ಎರಡು ಕೈಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಲೀಲಾವತಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಉಪ ವಲಯ ಅರಣ್ಯ ಅಧಿಕಾರಿ ಹಾಗೂ ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕಡಬ ಸೇರಿದಂತೆ ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ಭಾಗಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಮಿತಿಮೀರಿದ್ದು, ಜನಸಾಮಾನ್ಯರು ಆತಂಕದಲ್ಲೇ ಬದುಕುವಂತಾಗಿದೆ. ಮನೆ ಹಾಗೂ ತೋಟದ ಸಮೀಪವೇ ಕಾಡಾನೆ ಮತ್ತು ಕಾಡುಹಂದಿಗಳು ಕಾಣಿಸಿಕೊಳ್ಳುತ್ತಿರುವುದರಿಂದ, ರೈತರು ಕೃಷಿ ಚಟುವಟಿಕೆಗಳಿಗೆ ತೆರಳಲು ಭಯಪಡುವಂತಾಗಿದೆ.
ಕಾಡುಪ್ರಾಣಿಗಳ ನಿರಂತರ ಹಾವಳಿಯಿಂದ ಸಾರ್ವಜನಿಕರ ಜೀವಕ್ಕೆ ಸಂಚಕಾರ ಒದಗಿಬರುತ್ತಿದ್ದು, ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಈ ಬಗ್ಗೆ ತಕ್ಷಣ ಎಚ್ಚೆತ್ತುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಕಾಡುಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರದಂತೆ ತಡೆಯಲು ಪರಿಣಾಮಕಾರಿ ಯೋಜನೆಗಳನ್ನು ರೂಪಿಸಬೇಕು ಹಾಗೂ ತೊಂದರೆಗೊಳಗಾದ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.







Comments