ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಭೀಕರ ಹಲ್ಲೆ; ಆರೋಪಿ ಶರಣು
- Jul 6
- 1 min read

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂತಿಮಾರು ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಿಗ್ಗೆ ಆತಂಕಕಾರಿ ಘಟನೆಯೊಂದು ನಡೆದಿದೆ. ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ 17 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾನೆ.
ಬೆಳಿಗ್ಗೆ ಸುಮಾರು 8.45ರ ಸುಮಾರಿಗೆ ಈ ಘಟನೆ ನಡೆದಿದ್ದು, ಮಂಚಿ ನಿವಾಸಿ ಮೊಹಮ್ಮದ್ ಜವ್ವಾರ್ (28) ಎಂಬಾತ ವಿದ್ಯಾರ್ಥಿನಿಯ ತಲೆ ಹಾಗೂ ಕೈಗೆ ಮನಸೋಇಚ್ಛೆ ತಲವಾರಿನಿಂದ ಕಡಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಅಮಾನುಷ ಕೃತ್ಯ ಎಸಗಿದ ಬೆನ್ನಲ್ಲೇ ಆರೋಪಿ ಮೊಹಮ್ಮದ್ ಜವ್ವಾರ್ ನೇರವಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಹಲ್ಲೆಗೆ ನಿಖರವಾದ ಕಾರಣ ಏನೆಂಬುದರ ಕುರಿತು ತನಿಖೆ ಚುರುಕುಗೊಳಿಸಿದ್ದಾರೆ.







Comments