ಬೆಳ್ತಂಗಡಿಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ
- Feb 9
- 1 min read

ಬೆಳ್ತಂಗಡಿ, ಫೆ.9:
ಅಪ್ರಾಪ್ತ ವಯಸ್ಕ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿದ ಘಟನೆ ಬೆಳ್ತಂಗಡಿಯಲ್ಲಿ ಸೋಮವಾರ ಬೆಳಿಗ್ಗೆ ವರದಿಯಾಗಿದೆ. ಅಪಹರಣ ಯತ್ನ ವಿಫಲವಾದ ಬಳಿಕ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಫೆಬ್ರವರಿ 9ರಂದು ಬೆಳಿಗ್ಗೆ ಸುಮಾರು 8.30ರ ವೇಳೆಗೆ ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿ ಹಾಗೂ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿನಿ ಕಾಲೇಜಿಗೆ ತೆರಳಲು ಸಂತೆಕಟ್ಟೆ ಕಡೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಳು. ಈ ವೇಳೆ ಬಟ್ಟೆಯಿಂದ ಮುಚ್ಚಿದ ನಂಬರ್ ಪ್ಲೇಟ್ ಹೊಂದಿದ್ದ ಕಾರಿನಲ್ಲಿ ಬಂದ ಮೂವರು ಅಪರಿಚಿತರು ಆಕೆಯ ಸ್ಕೂಟರ್ ಅನ್ನು ಅಡ್ಡಗಟ್ಟಿ ಬಲವಂತವಾಗಿ ಕಾರಿಗೆ ಎಳೆಯಲು ಯತ್ನಿಸಿದ್ದಾರೆ ಎನ್ನಲಾಗಿದೆ.
ವಿದ್ಯಾರ್ಥಿನಿ ಕೂಗಿ ತೀವ್ರವಾಗಿ ಪ್ರತಿರೋಧ ವ್ಯಕ್ತಪಡಿಸಿದ ಪರಿಣಾಮ ಅಪಹರಣ ಯತ್ನ ವಿಫಲಗೊಂಡಿದೆ. ಈ ಸಂದರ್ಭ ಹಿಂಬದಿಯಿಂದ ಮತ್ತೊಂದು ಸ್ಕೂಟರ್ ಬರುತ್ತಿರುವುದನ್ನು ಗಮನಿಸಿದ ದುಷ್ಕರ್ಮಿಗಳು, ಬಾಲಕಿಯ ಕೈ ಮತ್ತು ಬೆರಳಿಗೆ ಚಾಕುವಿನಿಂದ ಇರಿದು ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣವೇ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ಪ್ರಕರಣ ದಾಖಲಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ.







Comments