ಬೆಳ್ತಂಗಡಿ: ಕಾಡಾನೆ ದಾಳಿಗೆ ವ್ಯಕ್ತಿ ಬಲಿ – ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ದುರಂತ

ಬೆಳ್ತಂಗಡಿ, ಆ. 2: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಶನಿವಾರ ಸಂಜೆ ಸಂಭವಿಸಿದೆ.
ಮೃತರನ್ನು ಇಡಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ.
ಮಾಹಿತಿಯಂತೆ, ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು, ಸಂಜೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ರಾತ್ರಿ ತಡವಾದರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಅವರನ್ನು ಹುಡುಕಾಟ ಆರಂಭಿಸಿದರು.
ಹುಡುಕಾಟದ ವೇಳೆ ಅವರು ಧರಿಸಿದ್ದ ಪ್ಲಾಸ್ಟಿಕ್ ರೈನ್ ಕೋಟ್ ದಾರಿಯ ಮಧ್ಯೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಯಿತು. ಅದರ ಸಮೀಪದಲ್ಲೇ ಕಾಡಾನೆಯ ಹೆಜ್ಜೆ ಗುರುತುಗಳು ಕಂಡುಬಂದಿದ್ದರಿಂದ ಕಾಡಾನೆ ದಾಳಿ ನಡೆಸಿರುವ ಅನುಮಾನ ಮತ್ತಷ್ಟು ಬಲವತ್ತಾಯಿತು.
ಬಳಿಕ ಸ್ಥಳೀಯರು ಸುತ್ತಮುತ್ತ ಶೋಧ ನಡೆಸಿದಾಗ ಸಮೀಪದ ಕಣಿಯೊಂದರಲ್ಲಿ ಬಾಲಕೃಷ್ಣ ಗೌಡ ಅವರ ಮೃತದೇಹ ಪತ್ತೆಯಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ ಕಾಡಾನೆ ದಾಳಿಯಿಂದಲೇ ಅವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.







Comments