ಕರ್ನಾಟಕ ಈಗ ‘ಬುಲ್ಡೋಜರ್ ರಾಜ್ಯ’: ಕೋಗಿಲು ಬಡಾವಣೆ ತೆರವು ಕಾರ್ಯಾಚರಣೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆಕ್ರೋಶ
- sathyapathanewsplu
- Dec 27, 2025
- 1 min read

ಬೆಂಗಳೂರಿನ ಯಲಹಂಕ ಸಮೀಪದ ಕೋಗಿಲು ಬಡಾವಣೆಯಲ್ಲಿ ನಡೆದ ಮನೆಗಳ ಧ್ವಂಸ ಪ್ರಕರಣದ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತೀವ್ರವಾಗಿ ಆಕ್ಷೇಪಿಸಿದ್ದಾರೆ. ಈ ಕುರಿತು ಎಕ್ಸ್ (ಟ್ವಿಟರ್) ಮೂಲಕ ಪ್ರತಿಕ್ರಿಯಿಸಿರುವ ಅವರು, ಕರ್ನಾಟಕವನ್ನು ‘ಬುಲ್ಡೋಜರ್ ರಾಜ್ಯ’ ಎಂದು ಬಣ್ಣಿಸಿದ್ದಾರೆ. ಉತ್ತರ ಭಾರತದಲ್ಲಿ ಸಂಘ ಪರಿವಾರವು ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಸುವ ದಮನಕಾರಿ ರಾಜಕೀಯವನ್ನು ಈಗ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೆ ತರುತ್ತಿರುವುದು ದುರದೃಷ್ಟಕರ ಎಂದು ಅವರು ಟೀಕಿಸಿದ್ದಾರೆ.
ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿ ದಶಕಗಳಿಂದ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬಗಳನ್ನು ಯಾವುದೇ ಮುನ್ಸೂಚನೆ ನೀಡದೆ ಒಕ್ಕಲೆಬ್ಬಿಸಲಾಗಿದೆ ಎಂದು ಪಿಣರಾಯಿ ದೂರಿದ್ದಾರೆ. "ಬಡ ಕುಟುಂಬಗಳನ್ನು ಈ ರಕ್ತ ಹೆಪ್ಪುಗಟ್ಟುವ ಚಳಿಯಲ್ಲಿ ಬೀದಿಪಾಲು ಮಾಡಿರುವುದು ‘ಬುಲ್ಡೋಜರ್ ರಾಜ್ಯ’ದ ಕ್ರೂರ ನೀತಿಯನ್ನು ಎತ್ತಿ ತೋರಿಸುತ್ತಿದೆ. ಸಾಂವಿಧಾನಿಕ ಮೌಲ್ಯಗಳು ಮತ್ತು ಮಾನವ ಘನತೆಯನ್ನು ಗಾಳಿಗೆ ತೂರಿ ಭಯದ ವಾತಾವರಣ ನಿರ್ಮಿಸಲಾಗುತ್ತಿದೆ" ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣವು ದಕ್ಷಿಣ ಭಾರತದ ರಾಜಕಾರಣದಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದೆ. ಸಾಮಾಜಿಕ ನ್ಯಾಯದ ಮಾತನಾಡವ ಕಾಂಗ್ರೆಸ್ ಪಕ್ಷವು ಬಿಜೆಪಿ ಆಡಳಿತದ ರಾಜ್ಯಗಳ ಮಾದರಿಯನ್ನು ಅನುಸರಿಸುತ್ತಿದೆ ಎಂಬ ಪಿಣರಾಯಿ ಅವರ ಆರೋಪಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದಾರೆ. ಭೂ ಮಾಫಿಯಾ ಮತ್ತು ಕೆರೆ ಒತ್ತುವರಿ ತೆರವುಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆಯೇ ಹೊರತು ಯಾವುದೇ ಸಮುದಾಯವನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಸರ್ಕಾರವು ಸ್ಪಷ್ಟನೆ ನೀಡಲು ಮುಂದಾಗಿದೆ.





Comments