ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಪುತ್ತೂರು ಉಪವಿಭಾಗದ 4 ತಾಲೂಕುಗಳಲ್ಲಿ ಆ.8ರಂದು ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು, ಆ.7: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ನೀಡಿರುವ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದಾದ್ಯಂತ ಮಳೆ ಮುಂದುವರಿದಿದೆ. ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಲವು ತುರ್ತು ಕ್ರಮಗಳನ್ನು ಕೈಗೊಂಡಿದೆ.

ಪುತ್ತೂರು ಉಪವಿಭಾಗದ ತಹಶೀಲ್ದಾರರ ಮನವಿಯ ಮೇರೆಗೆ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ITI ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ 2026ರ ಆಗಸ್ಟ್ 8ರಂದು ರಜೆ ಘೋಷಿಸಲಾಗಿದೆ. ಎಲ್ಲಾ ವಸತಿ ಶಾಲಾ-ಕಾಲೇಜುಗಳಿಗೂ ಈ ಆದೇಶ ಅನ್ವಯವಾಗಲಿದೆ.
ರಜೆ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005ರ ಅನ್ವಯ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಮಕ್ಕಳ ಸುರಕ್ಷತೆಗೆ ಆದ್ಯತೆ
ನೀರು ನಿಂತಿರುವ ತಗ್ಗು ಪ್ರದೇಶಗಳು, ಕೆರೆ, ನದಿ ಹಾಗೂ ಸಮುದ್ರತೀರಗಳಿಗೆ ಮಕ್ಕಳು ತೆರಳದಂತೆ ಪಾಲಕರು ವಿಶೇಷ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ಕೂಡ ನದಿತೀರ ಮತ್ತು ಸಮುದ್ರತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಮೀನುಗಾರರಿಗೆ ಸಮುದ್ರ ಪ್ರವೇಶ ನಿರ್ಬಂಧ
ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಯಾವುದೇ ಅಪಾಯಕಾರಿ ಪರಿಸ್ಥಿತಿಯನ್ನು ಎದುರಿಸದಂತೆ ಸಾರ್ವಜನಿಕರು ಆಡಳಿತದ ಮುನ್ನೆಚ್ಚರಿಕಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ.
ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಯಾವುದೇ ಲೋಪವಿಲ್ಲದೆ ನಿರ್ವಹಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುವುದರ ಜೊತೆಗೆ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ನಿರ್ದೇಶನ ನೀಡಲಾಗಿದೆ.
ಇದಲ್ಲದೆ, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮಳೆ ಮುಂದುವರಿಯುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಸಂಚರಿಸದೆ, ಸ್ಥಳೀಯ ಆಡಳಿತ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರ ನೀಡುವ ಮುನ್ನೆಚ್ಚರಿಕಾ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.







Comments