ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್: ಶಾಲೆಗಳಿಗೆ ರಜೆ, ಜನರಿಗೆ ಕಟ್ಟುನಿಟ್ಟಿನ ಸೂಚನೆ

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲೂ ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ತುರ್ತು ಕ್ರಮಗಳನ್ನು ಕೈಗೊಂಡಿದೆ. ಅದರಂತೆ, ಜುಲೈ 2, 2026 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಲಾಗಿದೆ.

ಪಾಲಕರು ತಮ್ಮ ಮಕ್ಕಳನ್ನು ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆಗಳು, ನದಿತೀರಗಳು ಹಾಗೂ ಸಮುದ್ರತೀರಗಳಿಗೆ ಹೋಗದಂತೆ ಕಟ್ಟುನಿಟ್ಟಾಗಿ ಗಮನ ವಹಿಸಲು ಸೂಚಿಸಲಾಗಿದೆ.
ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ಸಹ ನದಿತೀರ ಮತ್ತು ಸಮುದ್ರತೀರ ಪ್ರದೇಶಗಳಿಗೆ ತೆರಳಬಾರದು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಆದೇಶಿಸಲಾಗಿದೆ.
ಇದೇ ವೇಳೆ, ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಪ್ರತಿ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವ ಮೂಲಕ ತುರ್ತು ಪರಿಸ್ಥಿತಿಗೆ ಸನ್ನದ್ಧವಾಗಿರಲು ಸೂಚಿಸಲಾಗಿದೆ.
ಪ್ರಾಕೃತಿಕ ವಿಕೋಪಗಳಿಗೆ ಸಂಬಂಧಿಸಿದ ಯಾವುದೇ ತುರ್ತು ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತ ನೀಡಿರುವ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.







Comments