ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ : ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
Updated: Jul 17

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಜುಲೈ 18ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.
ಸಾರ್ವಜನಿಕರು ಮತ್ತು ಪ್ರವಾಸಿಗರು ನದಿ, ಕೆರೆ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ. ತಗ್ಗು ಪ್ರದೇಶಗಳ ಬಳಿ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಮನವಿ ಮಾಡಿದೆ.
ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕಾರ್ಯನಿರ್ವಹಿಸಲಿದ್ದಾರೆ. ಪ್ರತಿಯೊಂದು ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಲು ಕೋರಲಾಗಿದೆ.







Comments