ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು, ಜು. 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ನೀಡಿರುವ ಮುನ್ಸೂಚನೆಯ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಇದರ ಹಿನ್ನೆಲೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ತುರ್ತು ಕ್ರಮಗಳನ್ನು ಜಾರಿಗೆ ತಂದಿದೆ.
ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಜುಲೈ 08, 2026 ರಂದು ರಜೆ ಘೋಷಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಇದೇ ವೇಳೆ ಸಾರ್ವಜನಿಕರು ಮತ್ತು ಪಾಲಕರಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ. ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆ, ನದಿತೀರ ಮತ್ತು ಸಮುದ್ರ ತೀರಗಳಿಗೆ ಮಕ್ಕಳನ್ನು ಹೋಗಲು ಬಿಡಬಾರದು ಎಂದು ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಚಾಚೂ ತಪ್ಪದೆ ನಿರ್ವಹಿಸಬೇಕು. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಿ, ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಆದೇಶಿಸಲಾಗಿದೆ.
ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿತೀರ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪ್ರತಿಯೊಂದು ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವ ಮೂಲಕ ಸನ್ನದ್ಧ ಸ್ಥಿತಿಯಲ್ಲಿ ಇರಬೇಕು







Comments