ಕಡಬ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಮಂಗಳೂರಿನ ನ್ಯಾಯಾಲಯವು ಐತಿಹಾಸಿಕ ಹಾಗೂ ಕಠಿಣ ತೀರ್ಪು ಪ್ರಕಟಿಸಿದೆ. ಕಡಬ ತಾಲೂಕಿನ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪ (30) ಎಂಬಾತನೇ ಈ ಘಟನೆಯ ದೋಷಿಯಾಗಿದ್ದು, ಒಟ್ಟು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹50,000 ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುಮಂಗಲಾ ಚಕಲಬ್ಬಿ ಅವರು ತೀರ್ಪು ನೀಡಿದ್ದಾರೆ.
2021ರ ಮೇ 8ರಂದು ಈ ಕೃತ್ಯ ನಡೆದಿತ್ತು. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಜೀವ ಬೆದರಿಕೆ ಹಾಕಿ ಕೃತ್ಯ ಮರೆಮಾಚಲು ಯತ್ನಿಸಿದ್ದನು. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಗಂಭೀರ ಪ್ರಕರಣ ದಾಖಲಾಗಿತ್ತು. ಅಂದು ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾಗಿದ್ದ ಉಮೇಶ್ ಯು. ಅವರು ಅತ್ಯಂತ ನಿಖರ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ತ್ವರಿತವಾಗಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕರಾದ ಪುಷ್ಪರಾಜ್ ಆಡ್ಯಂತಾಯ ಅವರು ಬಲಿಷ್ಠ ಸಾಕ್ಷ್ಯಗಳನ್ನು ಮಂಡಿಸಿ ಸಮರ್ಥವಾಗಿ ವಾದ ಮಂಡಿಸಿದರು. ವಾದ-ಪ್ರತಿವಾದಗಳನ್ನು ಪರಿಗಣಿಸಿದ ನ್ಯಾಯಾಧೀಶರು, ಪೋಕ್ಸೋ ಕಾಯ್ದೆಯಡಿ 20 ವರ್ಷಗಳ ಕಠಿಣ ಜೈಲು ಮತ್ತು ₹25,000 ದಂಡ ಹಾಗೂ ಬೆದರಿಕೆ ಹಾಕಿದ ಐಪಿಸಿ ಕಲಂ 506ರಡಿ 1 ವರ್ಷ ಕಠಿಣ ಶಿಕ್ಷೆ ಹಾಗೂ ₹25,000 ದಂಡ ವಿಧಿಸಿ ಆದೇಶಿಸಿದರು. ದಂಡ ಪಾವತಿಸಲು ತಪ್ಪಿದ್ದಲ್ಲಿ ಹೆಚ್ಚುವರಿ ಶಿಕ್ಷೆಯನ್ನು ಅನುಭವಿಸಬೇಕಾಗಿದ್ದು, ಈ ತೀರ್ಪಿನಿಂದ ಸಂತ್ರಸ್ತೆಗೆ ನ್ಯಾಯ ದೊರೆತಂತಾಗಿದೆ.







Comments