ವಸತಿ ರಹಿತರಿಗೆ ಗುಡ್‌ನ್ಯೂಸ್: ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ ಹಂಚಿಕೆಗೆ ಸರ್ಕಾರ ಸಿದ್ಧತೆ

ಬೆಂಗಳೂರು: ರಾಜ್ಯದ ನಿವೇಶನ ಹಾಗೂ ವಸತಿ ರಹಿತರಿಗೆ ನಿವೇಶನ ಒದಗಿಸುವ ಚುನಾವಣಾ ಪ್ರಣಾಳಿಕೆಯ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ಉದ್ದೇಶಿಸಿದ್ದು, ನಿವೇಶನಗಳ ರಚನೆಗೆ ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸೂಚಿಸಿದೆ.

ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಮೂಲಕ ನಿರ್ದೇಶನ ನೀಡಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ 30×40, ನಗರದಲ್ಲಿ 20×30 ಅಡಿ ನಿವೇಶನ
ಸರ್ಕಾರದ ಉದ್ದೇಶಿತ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ 30×40 ಅಡಿ ಅಳತೆಯ ಹಾಗೂ ನಗರ ಪ್ರದೇಶಗಳಲ್ಲಿ 20×30 ಅಡಿ ಅಳತೆಯ ನಿವೇಶನಗಳನ್ನು ಸಿದ್ಧಪಡಿಸಲು ಉದ್ದೇಶಿಸಲಾಗಿದೆ.
ಇದಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ಲಭ್ಯವಿರುವ ಮತ್ತು ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ತಕ್ಷಣ ಗುರುತಿಸಿ, ನಿವೇಶನಗಳ ರಚನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಪ್ರಕ್ರಿಯೆ ತ್ವರಿತಗೊಳಿಸಲು ಸೂಚನೆ
ನಿವೇಶನಗಳ ರಚನೆಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ ತುರ್ತಾಗಿ ಪೂರ್ಣಗೊಳಿಸುವಂತೆ ಡಾ. ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದ ನಿವೇಶನ ಹಾಗೂ ವಸತಿ ರಹಿತರಿಗೆ ನಿವೇಶನ ಕಲ್ಪಿಸುವ ಸರ್ಕಾರದ ಭರವಸೆಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಈ ಕ್ರಮ ಮಹತ್ವದ್ದಾಗಿದೆ. ಯೋಜನೆ ಜಾರಿಯಾದಲ್ಲಿ ರಾಜ್ಯದಾದ್ಯಂತ ಸಾವಿರಾರು ಕುಟುಂಬಗಳಿಗೆ ಸ್ವಂತ ನಿವೇಶನ ದೊರೆಯುವ ನಿರೀಕ್ಷೆಯಿದೆ.







Comments