ಕೊನೆಗೂ ವಿಧಾನಸೌಧದ ಗದ್ದುಗೆ ಏರಿದ ಕನಕಪುರ ಬಂಡೆ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ
- Jun 3
- 1 min read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಹುನಿರೀಕ್ಷಿತ ಬೆಳವಣಿಗೆಯೊಂದಕ್ಕೆ ಇಂದು ತೆರೆಬಿದ್ದಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಬೆಂಗಳೂರಿನ ಲೋಕಭವನ ಆವರಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು. ಸಾವಿರಾರು ಕಾರ್ಯಕರ್ತರು, ಗಣ್ಯರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರ ಸಮ್ಮುಖದಲ್ಲಿ ನಡೆದ ಸಮಾರಂಭ ರಾಜಕೀಯವಾಗಿ ಮಹತ್ವ ಪಡೆದಿತ್ತು.
ಸಾಂಪ್ರದಾಯಿಕ ಉಡುಗೆಯಲ್ಲಿ ವೇದಿಕೆ ಏರಿದ ಡಿ.ಕೆ. ಶಿವಕುಮಾರ್ ಅವರು ರೇಷ್ಮೆ ಪಂಚೆ, ಜುಬ್ಬಾ ಹಾಗೂ ಶಲ್ಯ ಧರಿಸಿ ಗಮನ ಸೆಳೆದರು. ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ತಮ್ಮ ಆರಾಧ್ಯ ದೈವ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಈ ಐತಿಹಾಸಿಕ ಕ್ಷಣಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಸಾಕ್ಷಿಯಾದರು. ಪಕ್ಕದ ರಾಜ್ಯಗಳ ರಾಜಕೀಯ ನಾಯಕರು, ವಿವಿಧ ಮಠಾಧೀಶರು, ಧಾರ್ಮಿಕ ಮುಖಂಡರು, ಸಿನಿಮಾ ಕ್ಷೇತ್ರದ ಗಣ್ಯರು ಹಾಗೂ ಡಿ.ಕೆ. ಶಿವಕುಮಾರ್ ಅವರ ಕುಟುಂಬ ಸದಸ್ಯರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ಮತ್ತೊಂದು ವಿಶೇಷವೆಂದರೆ, ಇತ್ತೀಚೆಗೆ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ. ಸೋಮಶೇಖರ್ ಅವರು ಸಹ ಹಾಜರಾಗಿ ನೂತನ ಮುಖ್ಯಮಂತ್ರಿಗೆ ಶುಭಾಶಯ ಕೋರಿದರು.
ಯೂತ್ ಕಾಂಗ್ರೆಸ್ ಹೋರಾಟಗಾರನಾಗಿ ರಾಜಕೀಯ ಪಯಣ ಆರಂಭಿಸಿದ ಡಿ.ಕೆ. ಶಿವಕುಮಾರ್ ಅವರು ಇದೀಗ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿದ್ದು, ಅವರ ನಾಯಕತ್ವದಲ್ಲಿ ಕರ್ನಾಟಕದ ಮುಂದಿನ ರಾಜಕೀಯ ಹಾಗೂ ಅಭಿವೃದ್ಧಿಯ ದಿಕ್ಕಿನತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.







Comments