ಕೋಡಿಬೆಂಗ್ರೆ ಬಳಿ ಸಮುದ್ರಕ್ಕೆ ಮಗುಚಿದ ಪ್ರವಾಸಿ ಬೋಟ್; 15 ಮಂದಿ ರಕ್ಷಣೆ, ನಾಲ್ವರ ಸ್ಥಿತಿ ಗಂಭೀರ
- Jan 27
- 1 min read

ಉಡುಪಿ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಕೋಡಿಬೆಂಗ್ರೆ ಅಳಿವೆ ಬಾಗಿಲಿನ ಬಳಿ ಅಲೆಗಳ ಅಬ್ಬರಕ್ಕೆ ಸಿಲುಕಿ ಪ್ರವಾಸಿ ಬೋಟ್ ಒಂದು ಸಮುದ್ರಕ್ಕೆ ಮಗುಚಿದೆ. ಬೋಟ್‌ನಲ್ಲಿ ವಿಹಾರಕ್ಕೆ ತೆರಳಿದ್ದ 15 ಮಂದಿ ಪ್ರವಾಸಿಗರು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದಿದ್ದು, ಸ್ಥಳೀಯ ಮೀನುಗಾರರು ಮತ್ತು ಸಾರ್ವಜನಿಕರ ಸಮಯಪ್ರಜ್ಞೆಯಿಂದ ದೊಡ್ಡ ದುರಂತವೊಂದು ತಪ್ಪಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಸಮುದ್ರಕ್ಕೆ ಇಳಿದು ಎಲ್ಲಾ 15 ಮಂದಿಯನ್ನು ದಡಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನೀರುಪಾಲಾದವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ಮಲ್ಪೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೋಟ್‌ನಲ್ಲಿ ವಿಹಾರಕ್ಕೆ ತೆರಳಿದ್ದ ಪ್ರವಾಸಿಗರು ಕಡ್ಡಾಯವಾಗಿ ಧರಿಸಬೇಕಿದ್ದ ಲೈಫ್ ಜಾಕೆಟ್‌ಗಳನ್ನು ಧರಿಸಿರಲಿಲ್ಲ ಎಂಬ ಸಂಶಯ ವ್ಯಕ್ತವಾಗಿದೆ. ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಪ್ರವಾಸಿಗರನ್ನು ಕರೆದೊಯ್ದಿದ್ದೇ ಈ ಅವಘಡಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಈ ಅನಾಹುತಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರವಾಸಿ ಬೋಟ್ ನಿರ್ವಾಹಕರ ನಿರ್ಲಕ್ಷ್ಯದ ಬಗ್ಗೆ ತನಿಖೆ ಆರಂಭವಾಗಿದ್ದು, ಹವಾಮಾನ ವೈಪರೀತ್ಯ ಅಥವಾ ಅಲೆಗಳ ತೀವ್ರತೆ ಹೆಚ್ಚಿರುವಾಗ ಬೋಟ್ ಸಂಚಾರಕ್ಕೆ ಅನುಮತಿ ಇತ್ತೇ ಎಂಬ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಕರಾವಳಿ ತೀರದಲ್ಲಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.







Comments