ಕುಂದಾಪುರ: ಬಸ್ ಓವರ್‌ಟೇಕ್ ವೇಳೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ಶನಿವಾರ ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತರನ್ನು ಸೌಕೂರು ನಿವಾಸಿ ವಿಜಯ್ ದೇವಾಡಿಗ (26) ಎಂದು ಗುರುತಿಸಲಾಗಿದೆ. ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯ್, ಶನಿವಾರ ಬೆಳಿಗ್ಗೆ ತ್ರಾಸಿಯಿಂದ ಸೌಕೂರು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್ ಅನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸಿದಾಗ, ಎದುರಿನಿಂದ ಬರುತ್ತಿದ್ದ ಮತ್ತೊಂದು ಖಾಸಗಿ ಬಸ್‌ಗೆ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ವಿಜಯ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.







Comments