ಮಂಗಳೂರು: ₹5 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜಪೆ ಇನ್ಸ್‌ಪೆಕ್ಟರ್

ಮಂಗಳೂರು: ಚೀಟಿಂಗ್ ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬಜಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಪ್ರಕರಣದ ಆರೋಪಿಗಳಿಂದ ಹಣ ಬಿಡುಗಡೆ ಮಾಡಲು ಇನ್ಸ್‌ಪೆಕ್ಟರ್ ಬಾಲಕೃಷ್ಣ ಒಟ್ಟು ₹25 ಸಾವಿರ ಲಂಚದ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಮಂಗಳವಾರ ಮುಂಗಡವಾಗಿ ₹5 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಇನ್ಸ್‌ಪೆಕ್ಟರ್ ಅವರನ್ನು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ತೀವ್ರಗೊಳಿಸಿದ್ದಾರೆ.







Comments