ಮಂಗಳೂರು: ಬಾಲ್ಕನಿ ತಡೆಗೋಡೆ ಕುಸಿತ; ಗಂಭೀರ ಗಾಯಗೊಂಡಿದ್ದ 16 ವರ್ಷದ ವಿದ್ಯಾರ್ಥಿ ಸಾವು

ಮಂಗಳೂರು ನಗರದ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನಲ್ಲಿ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸೇಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ವಿದ್ಯಾರ್ಥಿಯನ್ನು ಹಳೆಅಂಗಡಿ ನಿವಾಸಿ ಮೊಹಮ್ಮದ್ ಶಮಾಜ್ (16) ಎಂದು ಗುರುತಿಸಲಾಗಿದೆ. ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಶಮಾಜ್ ನೆಲ ಮಹಡಿಯಲ್ಲಿ ನಿಂತಿದ್ದಾಗ ಮೇಲಿನಿಂದ ತಡೆಗೋಡೆಯ ಒಂದು ಭಾಗ ಕುಸಿದು ಅವರ ಮೇಲೆ ಬಿದ್ದಿತ್ತು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದು, ಅವರನ್ನು ಸುರಿಂಜೆ ನಿವಾಸಿ ಮೊಹಮ್ಮದ್ ಶನಾನ್ (18), ಅಡ್ಯಾರ್‌ನ ಹನೀಫ್ (23), ಕಸ್ಬಾ ಬೆಂಗ್ರೆಯ ಮೊಹಮ್ಮದ್ ಶಕೀಲ್ ಹುಸೇನ್ (18) ಹಾಗೂ ಕಾವೂರಿನ ಗಾಂಧಿನಗರ ನಿವಾಸಿ ದಾವೂದ್ ಫರ್ಸೀನ್ ಅಹ್ಮದ್ (18) ಎಂದು ಗುರುತಿಸಲಾಗಿದೆ.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕನ್ವೆನ್ಷನ್ ಹಾಲ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸೇರಿದ್ದರು. ಹಾಲ್‌ನಲ್ಲಿ ಜನದಟ್ಟಣೆ ಹೆಚ್ಚಾದ ಹಿನ್ನೆಲೆಯಲ್ಲಿ ಹಲವು ವಿದ್ಯಾರ್ಥಿಗಳು ಹೊರಗಿನ ಕಾರಿಡಾರ್‌ನಲ್ಲಿ ನಿಂತಿದ್ದರು ಎನ್ನಲಾಗಿದೆ. ಈ ವೇಳೆ ಕೆಲ ವಿದ್ಯಾರ್ಥಿಗಳು ದುರ್ಬಲವಾಗಿದ್ದ ಪ್ಯಾರಪಿಟ್ ಗೋಡೆಗೆ ಒರಗಿ ನಿಂತಿದ್ದಾಗ, ವಿದ್ಯಾರ್ಥಿಗಳ ಭಾರ ತಾಳದೆ ಗೋಡೆ ಕುಸಿದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.







Comments