MRPL ಘಟಕದಲ್ಲಿ ಸ್ಫೋಟ: ಓರ್ವನಿಗೆ ಗಂಭೀರ ಸುಟ್ಟ ಗಾಯ, ಆರು ಮಂದಿಗೆ ಸಣ್ಣಪುಟ್ಟ ಗಾಯ

ಮಂಗಳೂರು: ನಗರದ ಹೊರವಲಯದ ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಆವರಣದಲ್ಲಿರುವ CHT (Hydrogen Sulphur Treatment) ಘಟಕದಲ್ಲಿ ಬುಧವಾರ (ಸೆ.30) ಸ್ಫೋಟ ಸಂಭವಿಸಿ ಬಳಿಕ ಬೆಂಕಿ ಕಾಣಿಸಿಕೊಂಡಿದೆ.
ಸ್ಫೋಟದ ಬಳಿಕ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಘಟಕದಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಬ್ಯಾಪ್ಟಿಸ್ಟ್ ಅವರಿಗೆ ಸುಮಾರು 35% ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರ ಮಾಹಿತಿ ಪ್ರಕಾರ ಅಪಾಯದಿಂದ ಪಾರಾಗಿದ್ದಾರೆ.
ಇನ್ನು ಘಟಕದ ಪಕ್ಕದ ಕಚೇರಿಯಲ್ಲಿದ್ದ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರಿಗೆ ಹೊರರೋಗಿಗಳಾಗಿ ಚಿಕಿತ್ಸೆ ನೀಡಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಡಿಸಿಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಕುರಿತು ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.







Comments