ಸಾಮಾಜಿಕ ಜಾಲತಾಣದ 'ವಿಡಿಯೋ' ಕಾಟ: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ಯುವಕ ಅವಮಾನ ತಾಳಲಾರದೆ ಆತ್ಮಹತ್ಯೆ
- sathyapathanewsplu
- 3 days ago
- 1 min read

ಕೋಝಿಕ್ಕೋಡ್: ಜನದಟ್ಟಣೆಯ ಬಸ್ಸಿನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಯುವತಿಯೊಬ್ಬಳು ಮಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಆರೋಪ ಎದುರಿಸುತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೇರಳದ ಪಯ್ಯನ್ನೂರಿನಲ್ಲಿ ನಡೆದಿದೆ. ಕೋಝಿಕ್ಕೋಡ್‌ನ ಗೋವಿಂದಪುರಂ ಮೂಲದ ದೀಪಕ್ (40) ಎಂಬುವವರೇ ಮೃತಪಟ್ಟ ದುರ್ದೈವಿ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ದೀಪಕ್ ಉದ್ದೇಶಪೂರ್ವಕವಾಗಿ ತನ್ನನ್ನು ಮುಟ್ಟಿದ್ದಾನೆ ಎಂದು ಮಹಿಳೆಯೊಬ್ಬಳು ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.
ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಕ್ಷಣಮಾತ್ರದಲ್ಲಿ ವೈರಲ್ ಆಗಿದ್ದು, ಸುಮಾರು 20 ಲಕ್ಷಕ್ಕೂ ಹೆಚ್ಚು ಜನರು ಇದನ್ನು ವೀಕ್ಷಿಸಿದ್ದರು. ವಿಡಿಯೋ ಹರಿದಾಡುತ್ತಿದ್ದಂತೆ ಸಾರ್ವಜನಿಕವಾಗಿ ತೀವ್ರ ಅವಮಾನಕ್ಕೆ ಒಳಗಾದ ದೀಪಕ್, ಮಾನಸಿಕವಾಗಿ ಜರ್ಜರಿತರಾಗಿದ್ದರು ಎನ್ನಲಾಗಿದೆ. ವಿಡಿಯೋ ವೈರಲ್ ಆದ ಮರುದಿನವೇ ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಪೊಲೀಸರು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇನ್ನು ಈ ಘಟನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೇವಲ ಪ್ರಚಾರಕ್ಕಾಗಿ ಅಥವಾ ಸತ್ಯಾಸತ್ಯತೆ ತಿಳಿಯದೆ ವಿಡಿಯೋ ಹಂಚಿಕೊಳ್ಳುವ ಮೂಲಕ ಅಮಾಯಕನ ಜೀವ ತೆಗೆಯಲಾಗಿದೆ ಎಂದು ನೆಟ್ಟಿಗರು ಮಹಿಳೆಯ ವಿರುದ್ಧ ಕಿಡಿಕಾರಿದ್ದಾರೆ. ತನಿಖೆ ನಡೆಯುವ ಮೊದಲೇ ಡಿಜಿಟಲ್ ಲೋಕದಲ್ಲಿ ಶಿಕ್ಷೆ ನೀಡುವ ಈ ಪ್ರವೃತ್ತಿ ಅಪಾಯಕಾರಿ ಎಂದು ಅನೇಕರು ಆತಂಕ ವ್ಯಕ್ತಪಡಿಸಿದ್ದು, ಮೃತ ದೀಪಕ್ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.





Comments