ಶಾಲೆಗಳಲ್ಲಿ ಲೈಂಗಿಕ ಶಿಕ್ಷಣ ಕಡ್ಡಾಯ: ಕೇಂದ್ರ ಸರ್ಕಾರದ ಐತಿಹಾಸಿಕ ತೀರ್ಮಾನ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಹಾಗೂ ಹದಿಹರೆಯದವರಲ್ಲಿ ಜಾಗೃತಿ ಮೂಡಿಸಲು ದೇಶಾದ್ಯಂತ ಎಲ್ಲಾ ಶಾಲೆ ಮತ್ತು ಕಾಲೇಜುಗಳ ಪಠ್ಯಕ್ರಮದಲ್ಲಿ ‘ಸಮಗ್ರ ದೈಹಿಕ ಹಾಗೂ ಲೈಂಗಿಕ ಶಿಕ್ಷಣ’ವನ್ನು ಅಧಿಕೃತ ವಿಷಯವಾಗಿ ಪರಿಚಯಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ರಾಷ್ಟ್ರೀಯ ತಜ್ಞರ ಸಮಿತಿ ನೀಡಿರುವ ಕ್ರಾಂತಿಕಾರಿ ವರದಿಯನ್ನು ಒಪ್ಪಿಕೊಂಡಿರುವುದಾಗಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಧಿಕೃತವಾಗಿ ತಿಳಿಸಿದೆ.
ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನ್ವಯ ಎನ್‌ಸಿಇಆರ್‌ಟಿ ಈ ಹೊಸ ಪಠ್ಯಕ್ರಮವನ್ನು ವಿನ್ಯಾಸಗೊಳಿಸಲಿದೆ. ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಗುಡ್ ಟಚ್-ಬ್ಯಾಡ್ ಟಚ್, ದೌರ್ಜನ್ಯದ ವಿರುದ್ಧ ಜಾಗೃತಿ ಹಾಗೂ ದೇಹದ ನೈರ್ಮಲ್ಯದ ಬಗ್ಗೆ ವಿಶೇಷ ತರಬೇತಿ ಪಡೆದ ಶಿಕ್ಷಕರಿಂದ ವಾರಕ್ಕೆ ಕನಿಷ್ಠ ಎರಡು ಬಾರಿ ತರಗತಿಗಳನ್ನು ನಡೆಸುವುದು ಕಡ್ಡಾಯವಾಗಲಿದೆ.
ಇತ್ತೀಚಿನ ವರ್ಷಗಳಲ್ಲಿ ಅಪ್ರಾಪ್ತರಲ್ಲಿ ಪರಸ್ಪರ ಒಪ್ಪಿಗೆಯಿದ್ದರೂ ಕಾನೂನು ಅರಿವಿಲ್ಲದೆ ಪೋಕ್ಸೋ ಕಾಯ್ದೆಯಡಿ ಪ್ರಕರಣಗಳು ದಾಖಲಾಗುತ್ತಿರುವುದನ್ನು ಮತ್ತು ಅಪ್ರಾಪ್ತ ವಯಸ್ಸಿನ ಗರ್ಭಧಾರಣೆಯನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ ಮಕ್ಕಳಲ್ಲಿ ಆಗುವ ದೈಹಿಕ-ಮಾನಸಿಕ ಬದಲಾವಣೆಗಳನ್ನು ನಿರ್ವಹಿಸುವ ಕುರಿತು ಪೋಷಕರಿಗೂ ವಿಶೇಷ ಕೌನ್ಸಿಲಿಂಗ್ ನೀಡಲು ಸಮಿತಿ ಶಿಫಾರಸು ಮಾಡಿದೆ.







Comments