;
top of page

37 ವರ್ಷಗಳ ಬಳಿಕ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘ ಚುನಾವಣೆ: ಸಂಪುಟ ಸಭೆ ಅಸ್ತು

Sep 9
1 min read

ಬೆಂಗಳೂರು: ರಾಜ್ಯದ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ 37 ವರ್ಷಗಳ ಬಳಿಕ ವಿದ್ಯಾರ್ಥಿ ಸಂಘಗಳ ಚುನಾವಣೆಯನ್ನು ಮರುಜಾರಿಗೊಳಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸುವ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ.

ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಹೊಣೆಗಾರಿಕೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಚುನಾವಣೆ ನಡೆಸಲು ಸರ್ಕಾರ ನಿರ್ಧರಿಸಿದೆ. 2026-27ನೇ ಸಾಲಿನಿಂದಲೇ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ.

1989ರಲ್ಲಿ ಚುನಾವಣೆ ನಿಷೇಧ

ಕಾಲೇಜು ಕ್ಯಾಂಪಸ್‌ಗಳಲ್ಲಿ ಹೆಚ್ಚುತ್ತಿದ್ದ ಹಿಂಸಾಚಾರ, ಗೂಂಡಾಗಿರಿ ಹಾಗೂ ರಾಜಕೀಯ ಹಸ್ತಕ್ಷೇಪದ ಹಿನ್ನೆಲೆಯಲ್ಲಿ 1989ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ಸಂಘಗಳ ಚುನಾವಣೆಗಳನ್ನು ನಿಷೇಧಿಸಿತ್ತು. ಇದೀಗ 37 ವರ್ಷಗಳ ಬಳಿಕ ಈ ನಿಷೇಧವನ್ನು ತೆರವುಗೊಳಿಸಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.

ವಿದ್ಯಾರ್ಥಿ ಸಂಘದಲ್ಲಿ 10 ಮಂದಿ ಪದಾಧಿಕಾರಿಗಳು

ಹೊಸ ವ್ಯವಸ್ಥೆಯಡಿ ವಿದ್ಯಾರ್ಥಿ ಸಂಘದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಇಬ್ಬರು ಉಪಾಧ್ಯಕ್ಷರು ಇರಲಿದ್ದಾರೆ. ಇವರಲ್ಲಿ ಒಬ್ಬರು ಮಹಿಳೆಯಾಗಿರಬೇಕು.

ಅದೇ ರೀತಿ ಒಬ್ಬ ಕಾರ್ಯದರ್ಶಿ ಹಾಗೂ ಆರು ಮಂದಿ ಜಂಟಿ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಗುತ್ತದೆ. ಜಂಟಿ ಕಾರ್ಯದರ್ಶಿಗಳ ಪೈಕಿ ಇಬ್ಬರು ಮಹಿಳೆಯರಾಗಿರಬೇಕು. ಒಟ್ಟಾರೆ ವಿದ್ಯಾರ್ಥಿ ಸಂಘದಲ್ಲಿ 10 ಮಂದಿ ಪದಾಧಿಕಾರಿಗಳು ಇರಲಿದ್ದಾರೆ.

ಮೀಸಲಾತಿ ಇಲ್ಲ, ರಾಜಕೀಯ ಸಂಘಟನೆಗಳಿಗೆ ಅವಕಾಶವಿಲ್ಲ

ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಯಾವುದೇ ಮೀಸಲಾತಿ ಇರುವುದಿಲ್ಲ ಎಂದು ಸರ್ಕಾರ ನಿರ್ಧರಿಸಿದೆ. ಅಲ್ಲದೆ, ರಾಜಕೀಯ ಪಕ್ಷಗಳಿಗೆ ಸೇರಿದ ವಿದ್ಯಾರ್ಥಿ ಸಂಘಟನೆಗಳಿಗೆ ಚುನಾವಣೆಯಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ.

ಯಾವುದೇ ರಾಜಕೀಯ ಪಕ್ಷ ಅಥವಾ ಸಂಘಟನೆಗಳು ಕ್ಯಾಂಪಸ್‌ಗೆ ತೆರಳಿ ಚುನಾವಣಾ ಪ್ರಚಾರ ನಡೆಸುವಂತಿಲ್ಲ. ಚುನಾವಣೆ ಸಂಪೂರ್ಣವಾಗಿ ವಿದ್ಯಾರ್ಥಿ ಕೇಂದ್ರಿತವಾಗಿರಬೇಕು ಎಂಬ ನಿಲುವನ್ನು ಸರ್ಕಾರ ಹೊಂದಿದೆ.

ವಿದ್ಯಾರ್ಥಿಗಳ ಒಪ್ಪಿಗೆ ಕಡ್ಡಾಯ

ಯಾವುದೇ ಕಾಲೇಜಿನಲ್ಲಿ ಎಲ್ಲಾ ವಿದ್ಯಾರ್ಥಿಗಳೂ ಚುನಾವಣೆ ಬೇಡ ಎಂದು ಒಮ್ಮತದಿಂದ ನಿರ್ಧರಿಸಿದರೆ, ಅಂತಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಲಾಗುವುದಿಲ್ಲ ಎಂಬ ಷರತ್ತನ್ನೂ ಸರ್ಕಾರ ವಿಧಿಸಿದೆ.

ಈ ಮೂಲಕ ವಿದ್ಯಾರ್ಥಿಗಳ ಪ್ರಜಾಪ್ರಭುತ್ವದ ಭಾಗವಹಿಸುವಿಕೆಯನ್ನು ಉತ್ತೇಜಿಸುವುದರ ಜತೆಗೆ ಕ್ಯಾಂಪಸ್‌ಗಳಲ್ಲಿ ರಾಜಕೀಯ ಹಸ್ತಕ್ಷೇಪ ಹಾಗೂ ಸಂಘರ್ಷಗಳಿಗೆ ಅವಕಾಶವಾಗದಂತೆ ನಿಯಮಗಳನ್ನು ರೂಪಿಸಲು ಸರ್ಕಾರ ಮುಂದಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page