ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ಪುತ್ತೂರು ಶಾಸಕ ಅಶೋಕ್ ರೈ ಆಗ್ರಹ

ಮಂಗಳೂರು: ಮಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಬುಧವಾರ ಈ ಸಂಬಂಧ ಮುಖ್ಯಮಂತ್ರಿಗಳನ್ನು ಭೇಟಿಯಾದ ಶಾಸಕರು, ಕರಾವಳಿ ಭಾಗದ ಜನರ ಬಹುವರ್ಷಗಳ ಈ ಪ್ರಮುಖ ಬೇಡಿಕೆಯನ್ನು ಈಡೇರಿಸುವಂತೆ ಸವಿಸ್ತಾರವಾಗಿ ಮಾತುಕತೆ ನಡೆಸಿ ಮನವಿ ಪತ್ರ ಹಸ್ತಾಂತರಿಸಿದರು.
ಶಾಸಕರು ತಮ್ಮ ಮನವಿಯಲ್ಲಿ, ತುಳು ಭಾಷೆಯು ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು ಸುದೀರ್ಘ ಇತಿಹಾಸವನ್ನು ಹೊಂದಿದೆ ಎಂಬುದನ್ನು ಉಲ್ಲೇಖಿಸಿದ್ದಾರೆ. ಆಂಧ್ರಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಇತರೆ ಭಾಷೆಗಳನ್ನು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಅಂಗೀಕರಿಸಿರುವ ಮಾದರಿಯನ್ನೇ ಇಲ್ಲೂ ಅನುಸರಿಸಬಹುದು ಎಂದಿದ್ದಾರೆ. ಈ ಬಗ್ಗೆ ಆಂಧ್ರಪ್ರದೇಶಕ್ಕೆ ತೆರಳಿ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದ್ದು, ಈ ವಿಷಯವನ್ನು ಸದನದಲ್ಲೂ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.
ತುಳು ಭಾಷೆಗೆ ತನ್ನದೇ ಆದ ಸ್ವಂತ ಲಿಪಿಯಿದ್ದು, ಪ್ರಾಚೀನ ಭಾಷೆಯಾಗಿದ್ದರೂ ಇದನ್ನು ಅಧಿಕೃತ ಭಾಷೆಯಾಗಿ ಘೋಷಿಸುವುದರಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗುವುದಿಲ್ಲ. ಈ ಹಿಂದೆ ಕರಾವಳಿ ಪ್ರದೇಶಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಹಿರಿಯ ನಾಯಕರು ಈ ಬಗ್ಗೆ ಬಹಿರಂಗ ಭರವಸೆ ನೀಡಿದ್ದರು. ಆದ್ದರಿಂದ ಮಂಗಳೂರಿನಲ್ಲೇ ನಡೆಯುವ ಮುಂಬರುವ ಕ್ಯಾಬಿನೆಟ್ ಸಭೆಯಲ್ಲಿ ಈ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗುವುದು ಎಂಬ ಪೂರ್ಣ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಆಶಯ ವ್ಯಕ್ತಪಡಿಸಿದ್ದಾರೆ.







Comments