ವಿಟ್ಲ: ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಡಿಕ್ಕಿ; 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾರು

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ.
ವಿಟ್ಲದ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ಬಸ್ ಕುಂಟುಕುಡೇಲು ಇಳಿಜಾರು ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ತಾಂತ್ರಿಕ ದೋಷ ಉಂಟಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ ಎನ್ನಲಾಗಿದೆ. ಬಳಿಕ ಬಸ್ ನೇರವಾಗಿ ಕೆಳಗಡೆ ಚಲಿಸಿ, ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಘಟನೆಯ ವೇಳೆ ಬಸ್ಸಿನಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಪಘಾತದಲ್ಲಿ ಶಾಲಾ ಬಸ್ ಹಾನಿಗೊಳಗಾಗಿದ್ದು, ವಿದ್ಯುತ್ ಕಂಬ ಸಂಪೂರ್ಣವಾಗಿ ತುಂಡಾಗಿದೆ.
ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.







Comments