ಕೈತಪ್ಪಿದ ಸಚಿವ ಸ್ಥಾನ: ಶಾಸಕ ಸ್ಥಾನಕ್ಕೆ ಯಶವಂತರಾಯ ಗೌಡ ಪಾಟೀಲ್ ರಾಜೀನಾಮೆ; ಮೈಸೂರಿನಲ್ಲಿ ಪ್ರತಿಭಟನೆ ವೇಳೆ ಬೆಂಬಲಿಗ ವಿಷ ಸೇವನೆ ಯತ್ನ

ಬೆಂಗಳೂರು, ಆ. 3: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಿಗದಿಯಾಗಿರುವ ನಡುವೆ, ಸಚಿವ ಸ್ಥಾನ ಕೈತಪ್ಪಿದ ಅಸಮಾಧಾನ ಹಲವು ನಾಯಕರಲ್ಲಿ ಮತ್ತು ಅವರ ಬೆಂಬಲಿಗರಲ್ಲಿ ವ್ಯಕ್ತವಾಗಿದೆ.

ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರು ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಹಿರಿಯ ನಾಯಕರಾಗಿದ್ದರೂ ತಮ್ಮನ್ನು ಸಚಿವ ಸಂಪುಟದಿಂದ ಹೊರಗಿಟ್ಟಿರುವುದು ತೀವ್ರ ನಿರಾಶೆಗೆ ಕಾರಣವಾಗಿದ್ದು, ಈ ನಿರ್ಧಾರಕ್ಕೆ ವಿರೋಧವಾಗಿ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಈ ಕುರಿತು ಅಧಿಕೃತ ದೃಢೀಕರಣ ಇನ್ನಷ್ಟೇ ಲಭ್ಯವಾಗಬೇಕಿದೆ.
ಇನ್ನೊಂದೆಡೆ, ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆಕ್ರೋಶಗೊಂಡ ಬೆಂಬಲಿಗನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ವರದಿಯಾಗಿದೆ.
ತಕ್ಷಣವೇ ಸ್ಥಳದಲ್ಲಿದ್ದವರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಸಚಿವ ಸಂಪುಟ ವಿಸ್ತರಣೆಗೂ ಮುನ್ನ ನಡೆದ ಈ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಆಡಳಿತ ಪಕ್ಷದ ಹೈಕಮಾಂಡ್‌ಗೆ ಹೊಸ ಸವಾಲಾಗಿ ಪರಿಣಮಿಸಿವೆ.







Comments